ಕೃಷಿ : ತುಮಕೂರು ಜಿಲ್ಲೆಯಲ್ಲಿ ಮಳೆಯಿಂದಾಗಿ ಜನ-ಜಾನುವಾರು, ಮನೆ ಸೇರಿದಂತೆ ಬೆಳೆ ಹಾನಿ ಸಂಭವಿಸಿದಲ್ಲಿ ಕೃಷಿ (Agriculture) ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ಗೊಳಗಾದವರಿಗೆ ಶೀಘ್ರವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಲ್ಲಾ ತಾಲೂಕಿನ ತಹಶೀಲ್ದಾರರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯ ತುಮಕೂರು, ತುರುವೇಕೆರೆ ಹಾಗೂ ಕುಣಿಗಲ್ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ ಮಳೆಯಿಂದ ಹಾನಿಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದರು.
ಬೆಳೆ ಹಾನಿಯಲ್ಲಿ ಪರಿಹಾರ ಹಣ ಪಾವತಿಯನ್ನು ವಿಳಂಬ ಮಾಡದೆ ಶೀಘ್ರವಾಗಿ ಬಾಕಿ ಉಳಿದ ಪರಿಹಾರ ಹಣ ನೀಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಜಿಲ್ಲೆಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ರೈತರಿಗೆ ನೋಟಿಸ್ ನೀಡಿರುವ ಪ್ರಕರಣಗಳಿದ್ದಲ್ಲಿ ಕೂಡಲೇ ನನ್ನ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ನ್ಯಾಯಾಲಯಗಳಲ್ಲಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಕೃಷಿ ಜಂಟಿ ನಿದೇಶಕ ರಮೇಶ್ ಮಾತನಾಡಿ, ಮಳೆಯಿಂದ ಜಿಲ್ಲೆಯಲ್ಲಿ ಈವರೆಗೆ 263 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, 66 ರೈತರಿಗೆ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.