Thursday, February 6, 2025
Homeಜಿಲ್ಲೆಬೆಂಗಳೂರು ನಗರಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ..!

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು |  ಕಾಂಗ್ರೆಸ್‌ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಘೋಷಣೆ ಮಾಡಿದರು.

ಇಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತ್ತು ಅದಕ್ಕೂ ಮುಂಚಿತವಾಗಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ನಾನು ಮತ್ತು ಪಕ್ಷದ ಅಧ್ಯಕ್ಷರು ರುಜು ಮಾಡಿದ ಗ್ಯಾರಂಟಿ ಕಾರ್ಡುಗಳನ್ನು ಕನ್ನಡ ನಾಡಿನ ಪ್ರತಿ ಮನೆಗೂ ತಲುಪಿಸಿದ್ದೆವು. ಅದರಂತೆಯೇ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಈ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಿದ್ದಲ್ಲದೆ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ಯೋಜನೆಗಳ ಅನುಷ್ಠಾನ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಯಾವುದೇ ಜಾತಿ-ಧರ್ಮ-ಲಿಂಗ-ಭಾಷೆಯ ಬೇಲಿ ಇಲ್ಲದೆ ಸಮಸ್ತ ಕನ್ನಡಿಗರಿಗೆ ಈ ಯೋಜನೆಗಳನ್ನು ರೂಪಿಸಲಾಗಿದೆ. ಸರ್ಕಾರ ಘೋಷಿಸಿರುವ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವ ನಿಧಿ ಯೋಜನೆಗಳ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನ ಕೈಗೊಳ್ಳಲಾಗಿದೆ.

ಗೃಹ ಜ್ಯೋತಿ ಗ್ಯಾರಂಟಿ

ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 200 ಯುನಿಟ್‌ ವರೆಗೆ ಉಚಿತ ವಿದ್ಯುತ್‌ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿತು. ಈ ಯೋಜನೆಯಡಿ ಬಳಕೆದಾರರ ಕಳೆದ 12 ತಿಂಗಳ ವಿದ್ಯುತ್‌ ಬಳಕೆಯ ಸರಾಸರಿಯ ಮೇಲಿನ ಶೇ. 10 ರಷ್ಟು ಉಚಿತ ವಿದ್ಯುತ್‌ ಒದಗಿಸಲಾಗುವುದು. ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್‌ ಗೆ ಈ ಯೋಜನೆ ಅನ್ವಯವಾಗುತ್ತದೆ. ಅಲ್ಲಿಯ ವರೆಗಿನ ವಿದ್ಯುತ್‌ ಬಳಕೆಗೆ ಸಂಬಂಧಿಸಿದ ಬಿಲ್ಲನ್ನು ಬಳಕೆದಾರರು ಪಾವತಿಸಬೇಕು. ಆಗಸ್ಟ್ ತಿಂಗಳಿನಿಂದ ಈ ಯೋಜನೆಯ ಫಲಾನುಭವಿಗಳು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ ಎಂದು ಸಿದ್ದರಾಮಯ್ಯ ಅವರು ಘೋಷಿಸಿದರು.

ಗೃಹ ಲಕ್ಷ್ಮಿ ಗ್ಯಾರಂಟಿ

ರಾಜ್ಯದಲ್ಲಿರುವ ಬಿಪಿಎಲ್‌ ಹಾಗೂ ಎಪಿಎಲ್‌ ಕುಟುಂಬಗಳ ಯಜಮಾನಿಯ ಖಾತೆಗೆ ಮಾಸಿಕ 2000 ರೂ. ಮೊತ್ತ ವರ್ಗಾವಣೆ ಮಾಡಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಅರ್ಜಿ ಸಲ್ಲಿಸಬೇಕು. ಇದರಲ್ಲಿ ಮನೆಯ ಯಜಮಾನಿ ಯಾರು ಎಂಬುದನ್ನು ಘೋಷಿಸಬೇಕು; ಬ್ಯಾಂಕ್‌ ಖಾತೆ ಸಂಖ್ಯೆ, ಆಧಾರ್‌ ಸಂಖ್ಯೆ ಮಾಹಿತಿ ಒದಗಿಸಬೇಕು. ಜೂನ್‌ 15 ರಿಂದ ಜುಲೈ 15  ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಜುಲೈ 15 ರಿಂದ ಆಗಸ್ಟ್‌ 15ರ ಅವಧಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಿ, ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನ ಈ ಯೋಜನೆಗೆ ಚಾಲನೆ ನೀಡಲಾಗುವುದು.

ಅನ್ನ ಭಾಗ್ಯ ಗ್ಯಾರಂಟಿ

ಹಿಂದಿನ ತಮ್ಮ ಸರ್ಕಾರದ ಅವಧಿಯಲ್ಲಿ ನೀಡಲಾಗುತ್ತಿದ್ದ 7 ಕೆಜಿ ಆಹಾರ ಧಾನ್ಯವನ್ನು ಬಿಜೆಪಿ ಸರ್ಕಾರವು 5 ಕೆಜಿಗೆ ಇಳಿಸಿದೆ. ಇದೀಗ ಆಹಾರಧಾನ್ಯದ ಪ್ರಮಾಣವನ್ನು 10 ಕೆಜಿಗೆ ಹೆಚ್ಚಿಸಲಾಗುವುದು. ಜೂನ್‌ ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಪ್ರಾರಂಭವಾಗಿರುವುದರಿಂದ ಹಾಗೂ ಆಹಾರ ಧಾನ್ಯ ಖರೀದಿಸಬೇಕಾಗಿರುವುದರಿಂದ ಜುಲೈ 1 ರಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು. ಅಂತ್ಯೋದಯ ಕಾರ್ಡುದಾರರು ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಈ ಯೋಜನೆ ಸೌಲಭ್ಯ ದೊರೆಯಲಿದೆ.

ಶಕ್ತಿ ಗ್ಯಾರಂಟಿ

ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್‌ಗಳನ್ನು ಹೊರತುಪಡಿಸಿ ಇತರ ಎಲ್ಲ ಬಸ್‌ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಜೂನ್‌ 11 ರಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಈ ಯೋಜನೆಯು ಶೇ. 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ.  ಬಸ್‌ಗಳಲ್ಲಿ ಶೇ. 50 ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿರಿಸಲಾಗುತ್ತದೆ.

ಯುವನಿಧಿ ಗ್ಯಾರಂಟಿ

2022-23ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲ ವಿಧದ ಪದವೀಧರ ಯುವಕ-ಯುವತಿಯರು, ಡಿಪ್ಲೊಮಾ ಹೊಂದಿದವರಿಗೆ ಈ ಯೋಜನೆ ಅನ್ವಯಿಸುತ್ತದೆ. ಪದವಿ ಪಡೆದು 180 ದಿನಗಳಾದರೂ ಉದ್ಯೋಗ ದೊರೆಯದ ಪದವೀಧರರಿಗೆ 24 ತಿಂಗಳ ಅವಧಿಗೆ ಮಾಸಿಕ 3000 ರೂ. ಹಾಗೂ ಡಿಪ್ಲೊಮಾದಾರರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬೇಕಾಗಿದ್ದು, ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಸೌಲಭ್ಯ ಒದಗಿಸಲಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments