ತುಮಕೂರು | ದೇವರಾಯನದುರ್ಗದಲ್ಲಿ (Devarayanadurga) ಮಾರ್ಚ್ 17 ರಿಂದ 29ರವರೆಗೆ ವಿಜೃಂಭಣೆಯಿಂದ ಜರುಗಲಿರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ಜಾತ್ರಾ (Shri Lakshmi Narasimha Swami Jatra) ಮಹೋತ್ಸವದಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು (Precautionary measure) ಕೈಗೊಳ್ಳಬೇಕೆಂದು ತುಮಕೂರು (Tumkur) ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ (Shivananda B. Karale) ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಕಳೆದ ಬಾರಿ ಸಂಭವಿಸಿದ ಅಗ್ನಿ ಅವಘಡದಂತಹ ಪ್ರಕರಣಗಳು ಮತ್ತೊಮ್ಮೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಬೆಟ್ಟದ ಮೇಲೆ ಯಾವುದೇ ಸಾರ್ವಜನಿಕ ವಾಹನಗಳಿಗೆ ಪ್ರವೇಶ ನೀಡದೆ ಬೆಟ್ಟದ ಕೆಳಭಾಗದಲ್ಲಿ ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ರಥೋತ್ಸವದ ದಿನ ವಾಹನಗಳ ಏಕ ಮುಖ ಸಂಚಾರ ವ್ಯವಸ್ಥೆಗೆ ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.
ಜಾತ್ರಾ ಸಂದರ್ಭದಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯಿಂದ ದೇವರಾಯನ ದುರ್ಗದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಊರ್ಡಿಗೆರೆ ಮತ್ತು ತುಮಕೂರಿನಿಂದ ದೇವರಾಯನ ದುರ್ಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಬೇಕು. ರಸ್ತೆ ಬದಿಯಲ್ಲಿರುವ ಜಂಗಲ್ ಅನ್ನು ತೆರವುಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.
ಈ ಬಾರಿ ತಾಪಮಾನ ಹೆಚ್ಚಾಗಿರುವುದರಿಂದ ಬೆಟ್ಟದ ಮೇಲೆ-ಕೆಳಗೆ ಅಗ್ನಿ ಶಾಮಕದಳ ವಾಹನವನ್ನು ನಿಯೋಜನೆ ಮಾಡಬೇಕು. ಜಾತ್ರೆ ಮುಗಿಯುವ ತನಕ 3 ಫೇಸ್ ವಿದ್ಯುತ್ ಸರಬರಾಜು ಮಾಡುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಜಾತ್ರೆಯಲ್ಲಿ ಸ್ವಚ್ಛತೆ ಮತ್ತು ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಜಾತ್ರಾ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ವಿವಿಧ ಇಲಾಖೆಗಳು ಕೈಗೊಂಡಿರುವ ಅಗತ್ಯ ಸಿದ್ಧತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.