ತುಮಕೂರು | ದೀಪಾವಳಿ ಹಬ್ಬ (Diwali festival) ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತುಮಕೂರು (Tumakuru) ಜಿಲ್ಲೆಯಲ್ಲಿ ಹಸಿರು ಪಟಾಕಿಗಳನ್ನು (Green fireworks) ಮಾತ್ರ ಮಾರಾಟ ಮತ್ತು ಸಿಡಿಸಲು ಅವಕಾಶ ಕಲ್ಪಿಸಲಾಗಿದ್ದು, ಹಸಿರು ಪಟಾಕಿಗಳನ್ನು ((Green fireworks) ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಹಸಿರು ಪಟಾಕಿ ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಸಾರ್ವಜನಿಕರು ಎಚ್ಚರವಹಿಸಬೇಕು ಎಂದು ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದರು.
ತುಮಕೂರು ಮಹಾನಗರ ಪಾಲಿಕೆ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಈ ಕಾರ್ಯಪಡೆಯು ಹಸಿರು ಪಟಾಕಿ ಅಲ್ಲದೆ, ನಿಷೇಧಿತ ಪಟಾಕಿಯನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಪಟ್ಟವರ ವಿರುದ್ದ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ಹಸಿರು ಪಟಾಕಿಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಅನ್ನು ಪರಿಶೀಲಿಸುವುದು, ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇಲ್ಲದ ಪಟಾಕಿ ಹಸಿರು ಪಟಾಕಿಯಾಗಿರುವುದಿಲ್ಲ ಮತ್ತು ಅವುಗಳನ್ನು ನಿಯಮಾನುಸಾರ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ಯಾವುದೇ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ಪಟಾಕಿಗಳನ್ನು ಸ್ಪೋಟಿಸುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.
ಹೊರ ರಾಜ್ಯಗಳಿಂದ ಅನಧೀಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ವತಿಯಿಂದ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಹಾಗೂ ಸಾಗಾಟ ಮಾಡುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.