ತುಮಕೂರು | ಜಿಲ್ಲೆಯ ಕುಣಿಗಲ್, ಶಿರಾ, ತಿಪಟೂರು ಹಾಗೂ ತುಮಕೂರು ನಗರ ಸೇರಿದಂತೆ 19 ಪರೀಕ್ಷಾ ಕೇಂದ್ರಗಳಲ್ಲಿ ಮೇ 20 ಮತ್ತು 21 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಅಹಿತಕರ ಘಟನೆ, ನಕಲು ಪ್ರೇರಣಾ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್.ಪಾಟೀಲ ಅವರು ಆದೇಶಿಸಿದ್ದಾರೆ.
ಪರೀಕ್ಷೆಯನ್ನು ಸುಸೂತ್ರ ಮತ್ತು ದೋಷರಹಿತವಾಗಿ ನಡೆಸುವ ಸಲುವಾಗಿ ಈ ನಿಷೇಧಾಜ್ಞೆಯನ್ನು ಹೊರಡಿಸಲಾಗಿದ್ದು, ಮೇ 20 ಮತ್ತು 21 ರಂದು ಬೆಳಿಗ್ಗೆ 10 ರಿಂದ ಸಂಜೆ 4.30 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಎಂದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ನಿಷೇಧಾಜ್ಞೆಯು ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವ ಅನಧಿಕೃತ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.