ತುಮಕೂರು | ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ ಹತ್ತು ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಹಿನ್ನಲೆಯಲ್ಲಿ ಅನೇಕ ರಾಜಕೀಯ ಪಕ್ಷಗಳು ತನ್ನ ಹಿರಿಯ ನಾಯಕರನ್ನು ಕ್ಷೇತ್ರಕ್ಕೆ ಕರೆಸಿ ಪ್ರಚಾರವನ್ನು ಮಾಡುತ್ತಿದ್ದಾರೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತುಮಕೂರು ಜಿಲ್ಲೆಯ ತುರುವೇಕೆರೆ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ.
ಕಳೆದ ಚುನಾವಣೆಗಳನ್ನು ನೋಡಿದರೆ ತುರುವೇಕೆರೆ ವಿಧಾನಸಭಾ ಕ್ಷೇತ್ರ ಬಿಜೆಪಿ ಮತ್ತು ಜೆಡಿಎಸ್ ನಡುವೆ ಭಾರೀ ಪೈಪೋಟಿ ಎದುರಾಗುತ್ತಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಬೆಮೆಲ್ ಕಾಂತರಾಜು ಅಖಾಡಕ್ಕೆ ಇಳಿದಿದ್ದು, ಮೂರು ಪಕ್ಷಗಳಲ್ಲೂ ಕೂಡ ಭಾರಿ ಪೈಪೋಟಿ ಕಂಡುಬರುತ್ತಿದೆ.
ಈ ಬಾರಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಕ್ಷೇತ್ರಕ್ಕೆ ಆಗಮಿಸಿ ಮತದಾರರ ಹೋಲಿಕೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.
ಇಂದು ಬೆಳಗ್ಗೆ 11:30 ಕ್ಕೆ ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರ, ಮಧ್ಯಾಹ್ನ 1:15ಕ್ಕೆ ಹಾಸನದ ಅರಸೀಕೆರೆ ಕ್ಷೇತ್ರ, ಸಂಜೆ 4 ಗಂಟೆಗೆ ಚಾಮರಾಜನಗರದಲ್ಲಿ ಬೃಹತ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ. ಇನ್ನು ಚಾಮರಾಜನಗರದಲ್ಲಿ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸತತ ಎರಡನೇ ಬಾರಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.