ತುಮಕೂರು | ಜನವರಿ 26 ರಂದು ಭಾರತ ಗಣರಾಜ್ಯೋತ್ಸವ (Republic Day of India) ದಿನಾಚರಣೆಯನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ (Mahatma Gandhi Stadium) ವೈಭವಯುತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಿದ್ದು, ತುಮಕೂರು ಜಿಲ್ಲೆಯ (Tumkur District) ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ವರ್ಗದವರು ಉತ್ಸಾಹದಿಂದ ಭಾಗವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ (dc shubha kalian) ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆ-2024ರ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾಂಗಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ, ಪೀಠೋಪಕರಣ, ಕ್ರೀಡಾಂಗಣ ಸ್ವಚ್ಚತೆಯನ್ನು ಮಹಾನಗರಪಾಲಿಕೆ ನಿರ್ವಹಿಸಬೇಕು ಮತ್ತು ವೇದಿಕೆ ನಿರ್ಮಾಣ, ಬ್ಯಾರಿಕೇಡ್, ಬ್ಯಾಕ್ ಡ್ರಾಪ್, ಮುಂತಾದವುಗಳನ್ನು ಲೋಕೋಪಯೋಗಿ ಇಲಾಖೆ ನಿರ್ವಹಿಸುವಂತೆ ಸೂಚಿಸಿದರು.
ಕಾರ್ಯಕ್ರಮದ ಹಿಂದಿನ ದಿನ ನಗರದ ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಬೆಸ್ಕಾಂ ಸಂಸ್ಥೆಯವರು ಸದರಿ ದಿನದಂದು ಯಾವುದೇ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಲು ತಿಳಿಸಿದರು.
ಗಣರಾಜ್ಯೋತ್ಸವ ದಿನಾಚರಣೆಯನ್ನು ಸುಸೂತ್ರವಾಗಿ ನಡೆಸುವ ಸಂಬಂಧ ಸ್ವಾಗತ ಸಮಿತಿ, ಪೆರೆಡ್ ಸಮಿತಿ, ಸಿಹಿತಿಂಡಿ ವಿತರಣೆ ಸಮಿತಿ, ಪ್ರಶಸ್ತಿ ಆಯ್ಕೆ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿಗಳನ್ನು ರಚಿಸಲಾಗಿದ್ದು, ಈ ಎಲ್ಲಾ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ತಿಳಿಸಿದರು.
ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಮಕ್ಕಳಿಗೆ ಸಿಹಿ ಪ್ಯಾಕೇಟ್‌ಗಳನ್ನು ವಿತರಿಸಲು ಜಿಲ್ಲಾ ಹಾಲು ಒಕ್ಕೂಟ ನಿಯಮಿತ, ಮಲ್ಲಸಂದ್ರ ಇವರಿಗೆ ಸೂಚಿಸಲಾಯಿತು ಮತ್ತು ಸಂಜೆ 4.30ಕ್ಕೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸದರಿ ಕಾರ್ಯಕ್ರಮವನ್ನು ಸುಸೂತ್ರವಾಗಿ ನಿರ್ವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಲಾಯಿತು.
ಎಲ್ಲಾ ಕಚೇರಿಗಳ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ಮಾಡಲು ಸೂಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಮರಿಯಪ್ಪ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.